ಖಾಲಿ ಇರುವ ವೈದ್ಯರ ಹುದ್ದೆ ಶೀಘ್ರ ನೇಮಕ: ಬಿ.ಶ್ರೀರಾಮುಲು


ಮಡಿಕೇರಿ (TOC ನ್ಯೂಸ್) :-ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು ಹಾಗೂ ಶ್ರುಶ್ರೂಷಕ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲಾಗುವುದು. ಹಾಗೆಯೇ ಆಸ್ಪತ್ರೆಗೆ ಬೇಕಿರುವ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.  
ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ವೈದ್ಯಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರ ಜೊತೆ ಸಚಿವರು ಮಾತನಾಡಿದರು. 
ಕೊಡಗು ಜಿಲ್ಲಾ ಆಸ್ಪತ್ರೆಯು ಈಗ ಕೊಡಗು ವೈದ್ಯಕೀಯ ವಿಜ್ಞಾನ ವಿಭಾಗಕ್ಕೆ ಸೇರಿದೆ. 450 ಹಾಸಿಗೆ ಆಸ್ಪತ್ರೆಯಾಗಿದ್ದು, ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಅಗತ್ಯ ಔಷದೋಪಚಾರ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಬೇಕಿರುವ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಇಲ್ಲಿನ ಜನರು ಆರೋಗ್ಯಕ್ಕೆ ಸಂಬಂಧಿಸಿದಂತೆ ಮೈಸೂರು ಅಥವಾ ಮಂಗಳೂರಿಗೆ ತೆರಳುವುದು ಕಷ್ಟವಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ಬೇಕಿದ್ದು, ಈ ಸಂಬಂಧ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.  
ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಿಂತಲೂ ಉತ್ತಮ ಪಡಿಸಲು ಸರ್ಕಾರ ಹಲವು ರೀತಿಯ ಕ್ರಮಕೈಗೊಂಡಿದೆ.   ಜೊತೆಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು  ಸಿಗುವಂತಾಗಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಕಾರ್ಯಕ್ರಮಗಳು ದೇಶದಲ್ಲಿ ಮಾದರಿಯಾಗಿದೆ. ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಅವರು ಹಲವು ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹೇಳಿದರು. 
ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಹೆಚ್ಚು ಬರುತ್ತಾರೆ. ಆದ್ದರಿಂದ ಅಗತ್ಯ ಆರೋಗ್ಯ ಸೇವೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಹೆಚ್ಚಿನ ವೇತನವಿದೆ. ಅದನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರಿಗೆ, ಬಡವರಿಗೆ, ಕೂಲಕಾರ್ಮಿಕರಿಗೆ ಆರೋಗ್ಯ ಸೇವೆ ನೀಡಬೇಕು ಎಂದು ಅವರು ಸಲಹೆ ಮಾಡಿದರು. 
ಆಸ್ಪತ್ರೆಯಲ್ಲಿನ ಹಲವು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ವಾಸ್ತವ್ಯ ಹಮ್ಮಿಕೊಳ್ಳಲಾಗಿತ್ತು, ನಂತರ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಾಗುವುದು ಎಂದು ಅವರು ತಿಳಿಸಿದರು.
ಸರ್ಕಾರಿ ವೈದ್ಯಾಧಿಕಾರಿಗಳು ಸರ್ಕಾರಿ ಕೆಲಸ ದೇವರ ಕೆಲಸವೆಂದು ಕಾರ್ಯನಿರ್ವಹಿಸಬೇಕು ಎಂದರು.

 ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಮಂಜುಳಾ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ವೈದ್ಯಾಧಿಕಾರಿ ಎ.ಜೆ.ಲೋಕೇಶ್, ವೈದ್ಯಕೀಯ ಪ್ರಾಧ್ಯಾಪಕರು ಇತರರು ಇದ್ದರು. 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್,  ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಂದ ಜಿಲ್ಲೆಯ ಆಸ್ಪತ್ರೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು.