ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಉದ್ಘಾಟನೆ

     TOC ಮಡಿಕೇರಿ :-ಭಾರತೀಯ ಎಲೆಕ್ಟ್ರಾನಿಕ್ ಸಂಸ್ಥೆ ವತಿಯಿಂದ 2.25 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಟ್ಟಡವನ್ನು ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಹಾಗೂ ಬಿಇಎಲ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಕೆ.ಎಂ.ಶಿವಕುಮಾರನ್ ಅವರು ಸೋಮವಾರ ಉದ್ಘಾಟಿಸಿದರು.     
  ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ನೂತನ ಶಾಲೆ ಹೈಟೆಕ್ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ಶಾಲಾ ತರಗತಿಗಳು, ಮುಖ್ಯೋಪಾಧ್ಯಾಯರ ಕೊಠಡಿ, ಗಣಕ ಯಂತ್ರ ಕೊಠಡಿ, ಶಿಕ್ಷಕರ ಕೊಠಡಿ, ಗ್ರಂಥಾಲಯ, ಅಡುಗೆ ಕೋಣೆ, ದೈಹಿಕ ಶಿಕ್ಷಣ ಶಿಕ್ಷಕರ ಕೊಠಡಿ, ನಲಿ ಕಲಿ ತರಗತಿ ಹೀಗೆ ಹಲವು ಸೌಲಭ್ಯಗಳನ್ನು ಹೊಂದಿದೆ.
  ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಇಎಲ್ ಸಂಸ್ಥೆಯ ನಿರ್ದೇಶಕರಾದ ಕೆ.ಎಂ.ಶಿವಕುಮಾರನ್ ಅವರು  ವಿದ್ಯಾರ್ಥಿಗಳು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಒದಗಿಸುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಅವರು ಸಲಹೆ ಮಾಡಿದರು. 
  ದೇಶದ ರಕ್ಷಣಾ ಕ್ಷೇತ್ರದಲ್ಲಿ ಬಿಇಎಲ್ ಸಂಸ್ಥೆಯ ಪಾತ್ರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವ ಕೊಡಗು ಜಿಲ್ಲೆಗೆ ಏನಾದರೂ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಶಿವಕುಮಾರನ್ ಅವರು ಹೇಳಿದರು.
  ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಬೇಕು. ಗುಣಮಟ್ಟದ ಶಿಕ್ಷಣ ನೀಡಬೇಕು. ಆ ದಿಸೆಯಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಅವರು ಸಲಹೆ ಮಾಡಿದರು.
  ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕರಾಗಿ ನಿವೃತ್ತರಾಗಿರುವ ಹಾಗೂ ಈ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ, ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದ ಜಿ.ಆರ್.ಬಸವರಾಜ ಅವರು ಮಾತನಾಡಿ ಸರ್ಕಾರ ಸರ್ಕಾರಿ ಶಾಲೆಗಳಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಹಾಗೆಯೇ ಸರ್ಕಾರೇತರ ಸಂಸ್ಥೆಗಳು ಸಹ ಕೈಜೋಡಿಸಿದಾಗ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
  ಕಲಿಕೆಗೆ ಮೂಲಭೂತವಾಗಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಉತ್ತಮ ಶಾಲಾ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಲಾಯಿತು. ಈ ಹಿಂದೆ ಜಿ.ಪಂ.ಸಿಇಒ ಆಗಿದ್ದ ಚಾರುಲತಾ ಸೋಮಲ್ ಅವರ ಸಹಕಾರದಿಂದ ಬಿಇಎಲ್ ಸಂಸ್ಥೆಗೆ ಮನವಿ ಮಾಡಿ ನೂತನ ಶಾಲಾ ಕಟ್ಡಡ ನಿರ್ಮಾಣ ಮಾಡಲು ಸಾಧ್ಯವಾಯಿತು ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.
 ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಕ್ಷೇತ್ರದೊಂದಿಗೆ ಸರ್ಕಾರಿ ಸಂಸ್ಥೆಗಳು ಸಹ ಸ್ಪರ್ಧೆ ಮಾಡಬೇಕಿದೆ. ಇದು ಅನಿವಾರ್ಯವೂ ಸಹ. ಬಿಇಎಲ್ ಸಂಸ್ಥೆಯವರು ಮತ್ತೊಂದು ಶಾಲಾ ಕಟ್ಟಡ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಇದೇ ಸಂದರ್ಭದಲ್ಲಿ ಜಿ.ಆರ್.ಬಸವರಾಜ ಅವರು ಕೋರಿದರು.
 ಬಿಇಎಲ್ ಸಂಸ್ಥೆಯ ನಿರ್ದೇಶಕರಾದ ಕೆ.ಎಂ.ಶಿವಕುಮಾರನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಸಹ ನಿರ್ದೇಶಕರಾದ ಜಿ.ಆರ್.ಬಸವರಾಜ, ಬಿಇಎಲ್ ಸಂಸ್ಥೆಯ ಸಖೀರ್ ಹುಸೇನ್, ಗುರುರಾಜ್, ಭುವನೇಂದ್ರ ಸ್ವಾಮಿ, ರಾಜ ರೈ, ಬಿ.ಕೆ.ಶಶಿಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
 ಎಸ್‍ಡಿಎಂಸಿ ಅಧ್ಯಕ್ಷರಾದ ಶಿವಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಅಕ್ಷರಾ ದಾಸೋಹ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು, ನಿವೃತ್ತ ಮುಖ್ಯೋಪಾಧ್ಯಾಯರಾದ ವಸಂತಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಚಿತ್ರಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಚ್.ಎಸ್.ಚೇತನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ(ಮಡಿಕೇರಿ), ಮಂಜುನಾಥ (ಸೋಮವಾರಪೇಟೆ) ಇತರರು ಇದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಸ್ವಾಗತಿಸಿದರು. ರೇವತಿ ರಮೇಶ್ ನಿರೂಪಿಸಿದರು. ಶಿಕ್ಷಕಿ ತೇಜಸ್ವಿ ವರದಿ ವಾಚಿಸಿದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶಿವರಾಮ ವಂದಿಸಿದರು.