ಜ.19 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಅಗತ್ಯ ಸಿದ್ಧತೆಗೆ ಡಾ.ಸ್ನೇಹಾ ಸೂಚನೆ

No comments

TOC ಮಡಿಕೇರಿ :-ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವು ಜನವರಿ, 19 ರಂದು ನಡೆಯಲಿದ್ದು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ.ಸ್ನೇಹ ಅವರು ತಿಳಿಸಿದ್ದಾರೆ.       
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಿದ್ಧತೆ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್,  ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಅವರು ಸೂಚಿಸಿದರು.
ಪಲ್ಸ್ ಪೋಲಿಯೋ ಹನಿ ಹಾಕಲು ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪಲ್ಸ್ ಪೋಲಿಯೊ ಕಾರ್ಯಕ್ರಮ ದಿನದಲ್ಲಿ ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮವು ಜನವರಿ, 19 ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಜನವರಿ, 20, 21 ಮತ್ತು 22 ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ 20 ಮತ್ತು 21 ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. 
ಪಲ್ಸ್ ಪೋಲಿಯೊ ಹನಿ ಹಾಕುವ ದಿನಗಳಂದು ಪಂಚಾಯತ್ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕೋರಿದರು. 
ಕಾರ್ಯಕ್ರಮ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 38,409 ಮಕ್ಕಳಿದ್ದು, 4,556 ನಗರ ಪ್ರದೇಶದ ಮಕ್ಕಳು ಹಾಗೂ 33,853 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ 9,843 ವಲಸೆ ಮಕ್ಕಳಿದ್ದು, ಪೋಲಿಯೊ ಹನಿ ಹಾಕಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪೋಲಿಯೊ ಹನಿ ಹಾಕುವ ನಿಟ್ಟಿನಲ್ಲಿ 472 ಬೂತ್‍ಗಳನ್ನು ಸ್ಥಾಪಿಸಲಾಗಿದೆ. 21 ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. 6 ಸಂಚಾರಿ ತಂಡವನ್ನು ನಿಯೋಜಿಸಲಾಗಿದೆ. 1984 ಮಂದಿ ಪೋಲಿಯೊ ಹನಿ ಹಾಕುವವರು, 87 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. 944 ಮಂದಿ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲಿದ್ದಾರೆ ಎಂದು ಅವರು ತಿಳಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಶಿವಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜ್, ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ರಾಮಚಂದ್ರ ಕಾಮತ್, ಪೌರಾಯುಕ್ತರಾದ ಎಂ.ಎಲ್.ರಮೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಎಸ್.ಶಿರಾಲಿ, ಪೊಲೀಸ್ ಇನ್ಸ್‍ಪೆಕ್ಟ್‍ರ್ ಜಯರಾಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಗೀತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ತಹಶೀಲ್ದಾರ್ ಮಹೇಶ್, ಕಾರ್ಮಿಕ ಇಲಾಖೆಯ ತಾಲ್ಲೂಕು ಅಧಿಕಾರಿ ಯತ್ನಟ್ಟಿ, ಐಟಿಡಿಪಿ ಇಲಾಖೆ ವ್ಯವಸ್ಥಾಪಕರಾದ ದೇವರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿಕ್ಷಣಾಧಿಕಾರಿ ರಮೇಶ್, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಧಿಕಾರಿ ದೇವರಾಜು, ದಿವಾಕರ ಇತರರು ಇದ್ದರು.

No comments

Post a Comment