ಕೊರೊನಾ ವೈರಸ್; ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ: ವಿ.ಸೋಮಣ್ಣ

No comments
     ಮಡಿಕೇರಿ TOC:-ಕೊರೊನಾ ವೈರಸ್ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಸಿಬೇಕು. ಸರ್ಕಾರದ ಬಳಿ ಹಣವಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಸೂಚಿಸಿದ್ದಾರೆ.  

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಜೊತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

     ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆ ಕಲ್ಪಿಸಬೇಕು. ಹಣವಿಲ್ಲ ಎಂದು ಯಾವುದೇ ಸಬೂಬು ಹೇಳುವುದು ಬೇಡ. ಸಾರ್ವಜನಿಕರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಸಮಾರೋಪಾದಿಯಲ್ಲಿ ಕೋವಿಡ್-19 ನಿಯಂತ್ರಣ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕಿದೆ ಎಂದು ವಿ.ಸೋಮಣ್ಣ ಅವರು  ಹೇಳಿದರು. 

   ಕೊರೊನಾ ವೈರಸ್‍ನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಇನ್ನೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಗಡಿಭಾಗದಲ್ಲಿ ತರಕಾರಿ, ಹಾಲು ಹೊರತುಪಡಿಸಿ ಇತರೆ ಎಲ್ಲಾ ವಾಹನ ಸಂಚಾರವನ್ನು ಸಂಪೂರ್ಣವಾಗಿ ಮುಚ್ಚುವಂತೆ  ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.   

     ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಎಲ್ಲರೂ ಕೈಜೋಡಿಸಬೇಕಿದೆ. ವಿದೇಶದಿಂದ ಬರುವವರ ಬಗ್ಗೆ ವಿಶೇಷ ಗಮನಹರಿಸಬೇಕು. ಥರ್ಮೋ ಸ್ಕ್ಯಾನಿಂಗ್‍ನ್ನು ಕಡ್ಡಾಯವಾಗಿ ಮಾಡಬೇಕು. ಮನೆ ಸಂಪರ್ಕ ತಡೆಯಲ್ಲಿರುವವರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.  

       ಮೂರು ತಾಲ್ಲೂಕಿನ ತಾಲ್ಲೂಕು ಆಸ್ಪತ್ರೆಗಳಲ್ಲಿ ತಹಶೀಲ್ದಾರ್, ವೈದ್ಯಾಧಿಕಾರಿಗಳು ಒಳಗೊಂಡ ಟಾಸ್ಕ್‍ಪೋರ್ಸ್ ಸಮಿತಿಯನ್ನು ರಚಿಸಬೇಕು. ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡಬೇಕು. ಶೌಚಾಲಯ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ವಿ.ಸೋಮಣ್ಣ ಅವರು ಹೇಳಿದರು.  

      ಮಾರ್ಚ್, 27 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 6,750 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. 27 ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ಸುಸಜ್ಜಿತವಾಗಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಶ್ರುಶ್ರೂಷಕರನ್ನು ನಿಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
  
      ಜಿಲ್ಲೆಯ ಯಾವುದೇ ಭಾಗದಲ್ಲಿ ಪಾನಿಪುರಿ, ಮಸಾಲೆಪುರಿ ಅಥವಾ ಗೋಭಿ ಮಂಚೂರಿ ಮತ್ತಿತರ ರಸ್ತೆ ಬದಿ ಮಾರಾಟ ಮಾಡುವುದನ್ನು ತಡೆಯಬೇಕಿದೆ ಎಂದರು.  

     ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಾಸ್ಕ್ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಮಾಸ್ಕ್‍ನ್ನು ಎಲ್ಲಾ ಕಡೆಯು ಉಚಿತವಾಗಿ ಕಲ್ಪಿಸಬೇಕು ಎಂದರು.   

     ಸರ್ಕಾರ 200 ಕೋಟಿ ರೂ. ಬಿಡುಗಡೆ ಮಾಡಿದ್ದು, ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.  

     ವಿದೇಶದಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಅಧಿಕಾರಿಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದಂತೆ ಈ ಸಂದರ್ಭದಲ್ಲಿಯೂ ಸಹ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು. 

      ಮಡಿಕೇರಿ ಮತ್ತು ವಿರಾಜಪೇಟೆ ಆಸ್ಪತ್ರೆಗಳಲ್ಲಿ ವಿಶೇಷ ಗಮನಹರಿಸಬೇಕು. ಜಿಲ್ಲಾಡಳಿತದಿಂದ ಬರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಅಧಿಕಾರಿಗಳು ಪಾಲಿಸಬೇಕು ಎಂದು ಅವರು ಸೂಚಿಸಿದರು.  

     ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಪ್ರಧಾನಮಂತ್ರಿ ಮೋದಿ ಅವರು  ಮಾರ್ಚ್, 22 ರಂದು ಬೆಳಗ್ಗೆ 07 ರಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕಫ್ರ್ಯೂನ್ನು ಘೋಷಿಸಿದ್ದು, ಪ್ರತಿಯೊಬ್ಬರೂ ಸಹಕಾರ ನೀಡುವಂತಾಗಬೇಕು. ಇದರ ಉದ್ದೇಶವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದರು.  

     ಪ್ರತಿಯೊಬ್ಬರೂ ಮನೆಯಲ್ಲಿಯೇ ಇರುವುದರಿಂದ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಣ ಮಾಡಬಹುದು. ಆ ನಿಟ್ಟಿನಲ್ಲಿ ಜನತಾ ಕಫ್ರ್ಯೂ ಘೋಷಿಸಲಾಗಿದೆ ಎಂದು ಸಚಿವರು ತಿಳಿಸಿದರು.
 
     ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲಾಗಿದೆ. ಸೂಪರ್ ಸ್ಪೆಷಾಲಿಟಿ ಮತ್ತು ಮಲ್ಟಿ ಸ್ಪೇಸಾಲಿಟಿ ಆಸ್ಪತ್ರೆಗೆ ಏನು ವ್ಯತ್ಯಾಸವಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಹಂತ ಹಂತವಾಗಿ ದೊರೆಯಲಿವೆ. ಮಲ್ಟಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧಿಸಿದಂತೆ ಗೊಂದಲ ಬೇಡ ಎಂದು ಪ್ರತಾಪ್ ಸಿಂಹ ಅವರು ವಿವರಿಸಿದರು. 

    ಕೊರೊನಾ ವೈರಸ್ ಸಂಬಂಧಿಸಿದಂತೆ 2 ನೇ ಹಂತ, 3ನೇ ಹಂತ ಮತ್ತು ನಾಲ್ಕನೇ ಹಂತದಲ್ಲಿ ಇನ್ನೂ ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಜನತಾ ಕಫ್ರ್ಯೂಗೆ ಎಲ್ಲರೂ ಸಹಕರಿಸಬೇಕಿದೆ ಎಂದು ಅವರು ಕೋರಿದರು.  

     ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಮಾರ್ಚ್, 31 ರವರೆಗೆ ಎಲ್ಲಾ ರೀತಿಯ ನಿಬಂಧನೆಗಳನ್ನು ಕೈಗೊಳ್ಳಲಾಗಿದೆ. ಕೇರಳ ಗಡಿಭಾಗದಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದಂತೆ ವಾಹನ ಸಂಚಾರವನ್ನು ಮುಚ್ಚಲಾಗಿದೆ. 242 ಮಂದಿ ವಿದೇಶದಿಂದ ಬಂದಿದ್ದು, ಮನೆ ಸಂಪರ್ಕ ತಡೆಯಲಿದ್ದಾರೆ. ಆಸ್ಪತ್ರೆಯಲ್ಲಿ ಎಂಟು ಮಂದಿ ಇದ್ದು, ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಕ್ಕಿ ಜ್ವರ ತಡೆಯಲು ಕ್ರಮವಹಿಸಲಾಗಿದೆ. ಕೊಂಡಂಗೇರಿ ನಿರ್ಭಂಧಿತ ಪ್ರದೇಶದಲ್ಲಿ ಅಗತ್ಯ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.  

     ಜಿಲ್ಲೆಯಲ್ಲಿ 18 ಅಂಬುಲೆನ್ಸ್ ವಾಹನಗಳಿದ್ದು, ಕೊರೊನಾ ವೈರಸ್ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
   
      ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ನಾನಾ ಇಲಾಖೆ ಅಧಿಕಾರಿಗಳು ಇದ್ದರು.

No comments

Post a Comment