ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ: ಎನ್.ಸುಬ್ರಮಣ್ಯ

No comments

ಮಡಿಕೇರಿ ಆ.21(web@timesofcoorg):-ಜಿಲ್ಲೆಯ ಹಾಡಿಗಳಲ್ಲಿ ವಾಸಿಸುವ ಆದಿವಾಸಿ ಬುಡಕಟ್ಟು ಕುಟುಂಬಗಳು ಶಿಕ್ಷಣದಿಂದ ವಂಚಿತರಾಗಿದ್ದು, ಬುಡಕಟ್ಟು ಆದಿವಾಸಿ ಮಕ್ಕಳು ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಹ್ಮಣ್ಯ ಅವರು ಕರೆ ನೀಡಿದ್ದಾರೆ.

ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಹಾಡಿಯ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಅರಿವು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಸರ್ಕಾರವು ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತಾಗಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳು, ಶಿಷ್ಯವೇತನ, ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಧನ, ಜೊತೆಗೆ ಉಚಿತ ಶಿಕ್ಷಣ ಹೀಗೆ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇವುಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಹೇಳಿದರು. 

 ಆದಿವಾಸಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆದು ಉತ್ತಮ ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣ ಪಡೆದರೆ ಮಾತ್ರ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬದಲಾವಣೆ ಕಾಣಲು ಸಾಧ್ಯ ಎಂದು ಎನ್.ಸುಬ್ರಹ್ಮಣ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಸ್ವಾತಂತ್ರ್ಯ ಪೂರ್ವಕ್ಕೂ ಮೊದಲು ಸಾಕ್ಷರತೆ ತುಂಬಾ ಕಡಿಮೆ ಇತ್ತು. ಸ್ವಾತಂತ್ರ್ಯ ನಂತರ ಪಂಚವಾರ್ಷಿಕ ಯೋಜನೆ ಮೂಲಕ ಶಿಕ್ಷಣಕ್ಕೆ ಒತ್ತು ನೀಡಲಾಯಿತು ಎಂದರು.  

ಉನ್ನತ ಶಿಕ್ಷಣ ಪಡೆದಿದ್ದಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಮತ್ತಿತರವನ್ನು ತಡೆಯಲು ಸಾಧ್ಯ, ಅನಕ್ಷರತೆಯಿಂದಾಗಿಯೇ ಹಲವು ಸಮಸ್ಯೆಗಳು ಸಮಾಜದಲ್ಲಿ ಉದ್ಭವಿಸುತ್ತವೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಕಾನೂನಿನ ಅರಿವು ಪಡೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ಹೇಳಿದರು.   

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ನಿಗಾ ಇಡಬೇಕಿದೆ ಎಂದು ಅವರು ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಪರಶುರಾಮ ಅವರು ಮಾತನಾಡಿ ಆದಿವಾಸಿ ಬುಡಕಟ್ಟು ಜನಾಂಗವು ಇಂದಿನ ಆಧುನಿಕ ಯುಗದಲ್ಲಿ ಕಾನೂನು ಹಾಗೂ ಸಾಕ್ಷರತೆ ಕೊರತೆಯಿಂದಾಗಿ ತಮ್ಮ ಹಕ್ಕುಗಳನ್ನು ಪಡೆಯುವಲ್ಲಿ ಹಿಂದೆ ಉಳಿದಿದೆ ಎಂದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರವಿಂಧ ಬಾಬು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎ.ಎಂ.ಸೂರಜ್, ತಾಲ್ಲೂಕು ಗಿರಿಜನ ಅಧಿಕಾರಿ ಬಾಲಕೃಷ್ಣ ರೈ, ಸಿಡಿಪಿಒ ಅಣ್ಣಯ್ಯ, ಶ್ಯಾಮ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಇತರರು ಇದ್ದರು..

No comments

Post a Comment